Ashwaveega News 24×7 ಫೆಬ್ರವರಿ 20 – 2026 ಬಾಗಲಕೋಟೆ : ಶಿವಾಜಿ ಜಯಂತಿ ಶೋಭಾಯತ್ರೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಕಾ ಮಸೀದಿ ಸಮೀಪ ಕಿಡಿಗೇಡಿಗಳು ಶೋಭಾಯಾತ್ರೆಯ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು , ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಸ್ಪಿ Siddharth Goyal ಅವರಿಗೆ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .
ಕಲ್ಲು ತೂರಾಟದ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಧ್ಯರಾತ್ರಿಯಿಂದಲೇ ಬಾಗಲಕೋಟೆ , ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ಕಡೆಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಾಲ್ಕು ಮಂದಿಗಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ.
ಇದಕ್ಕೆ ಪ್ರತಿಯಾಗಿ ಹಿಂದೂ ಸಂಘಟನೆಗಳು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದರೂ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.
ಸ್ಥಳೀಯ ಆಡಳಿತ ಶಾಂತಿ ಕಾಪಾಡಲು ಸಾರ್ವಜನಿಕರಿಗೆ ಮನವಿ ಮಾಡಿದ್ದು, ವದಂತಿಗಳಿಗೆ ಕಿವಿಗೊಡಬಾರದೆಂದು ಸೂಚಿಸಿದೆ.
