Ashwaveega News 24×7 ಫೆಬ್ರವರಿ 23 – 2026 ಬೆಂಗಳೂರು : ಸಾರಿಗೆ ಸಿಬ್ಬಂದಿ ಸಮರದ ಬೆನ್ನಲ್ಲೇ ಇದೀಗ ಸರ್ಕಾರಿ ವೈದ್ಯರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದೊಂದಿಗೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಮಾರ್ಚ್ 11ರಿಂದ ಹಂತ ಹಂತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಮೊದಲ ಹಂತದಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (OPD) ಸೇವೆಯನ್ನು ಬಂದ್ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ OPD ಸೇವೆ ಸ್ಥಗಿತಗೊಳ್ಳಲಿದೆ.
ವೈದ್ಯರು ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಿದ್ದು, ಹೊರರೋಗಿ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದ್ದಾರೆ. ಆದರೆ ತುರ್ತು ಸೇವೆಗಳು ಮಾತ್ರ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
ಎರಡನೇ ಹಂತದಲ್ಲಿ ವೈದ್ಯರು ಆಸ್ಪತ್ರೆಗಳಿಗೆ ಗೈರಾಗುವ ಮೂಲಕ ತೀವ್ರ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಸಾವಿರಾರು ರೋಗಿಗಳಿಗೆ ತೊಂದರೆ ಉಂಟಾಗುವ ಆತಂಕ ವ್ಯಕ್ತವಾಗಿದೆ. ಸರ್ಕಾರ ತಕ್ಷಣ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
