Ashwaveega News 24×7 ಮಾರ್ಚ್ 06 – 2026 : ರಾಜ್ಯ ಬಜೆಟ್ನಲ್ಲಿ ಮಕ್ಕಳ ಆರೋಗ್ಯ ಮತ್ತು ಮಾನಸಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಪ್ರಸ್ತಾವನೆ ಮಾಡಲಾಗಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ಬಗ್ಗೆ ಸರ್ಕಾರ ಉಲ್ಲೇಖ ಮಾಡಿದೆ.
ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿಯಂತ್ರಣ ತರಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ . ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿರ್ಬಂಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ. ಮಕ್ಕಳು ಹೆಚ್ಚು ಸಮಯ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕಳೆಯುತ್ತಿರುವುದು ಶಿಕ್ಷಣ ಮತ್ತು ಅವರ ಒಟ್ಟಾರೆ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.
ಒಟ್ಟಾರೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಹಿತದೃಷ್ಟಿಯಿಂದ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಯಂತ್ರಣ ತರಲು ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
