Ashwaveega News 24×7 ಮಾರ್ಚ್ 30 – 2026 : ಬೆಂಗಳೂರು : ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸೇವಾ ಪಥವನ್ನು ಸ್ಮರಿಸುವ ಉದ್ದೇಶದಿಂದ ನಗರದ ಪ್ರೆಸ್ಟೀಜ್ ಸಭಾಂಗಣದಲ್ಲಿ “ಕನ್ನಡ ಕಾಯಕ – ನಾಲ್ಕು ದಶಕ” ಹೆಸರಿನ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ “ಕರ್ನಾಟಕ ಸಾರ್ವಭೌಮ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು. ಮಹಿಳಾ ಸಬಲೀಕರಣ ಮತ್ತು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ ಅಶ್ವರಾಮಾನುಜ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಶ್ರೀಮತಿ ಜಯಶ್ರೀ ರಾಮಚಂದ್ರ ಅನವೇರಿ ಅವರಿಗೆ ಕೂಡ ಈ ಗೌರವ ಲಭಿಸಿತು .
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯೂ ಆಗಿರುವ ನಟಿ ಜಯಮಾಲ, ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕರವೇ ಕಾರ್ಯಕರ್ತರು ಸಹ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶ್ರೀಮತಿ ಜಯಶ್ರೀ ರಾಮಚಂದ್ರ ಅನವೇರಿ ಅವರು, ಈ ಗೌರವ ತನ್ನ ಮುಂದಿನ ಸಾಮಾಜಿಕ ಸೇವೆಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
