
Centre, Karnataka govt to share price gap relief for mango farmers
ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರಡೆರೆಡು ರೂ.ಗಳಂತೆ ಒಟ್ಟು 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿವೆ. ಶನಿವಾರ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಈ ಮೂಲಕ 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೃಷಿ-ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಸೋಮವಾರ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದು. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.
ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆಯುವ ಪ್ರದೇಶಗಳಾಗಿವೆ. ಮಾವಿನ ಕೊಯ್ಲು ಮೇಯಿಂದ ಜುಲೈವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳಾಗಿವೆ.