
Ashwaveega News 24×7 ಅ. 02: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2:45ಕ್ಕೆ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ನ್ಯಾಯಪೀಠ, ಸುದೀರ್ಘ ವಾದ ಆಲಿಸಿದ ಬಳಿಕ, ಮಧ್ಯಾಹ್ನ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ.
ಪ್ರಕರಣದ ಹಿನ್ನೆಲೆ : ಮೈಸೂರಿನ ಕೆ.ಆರ್. ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಸಂಬಂಧ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷದ ಅಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ವಿದೇಶದಿಂದ ಹಿಂದಿರುಗುತ್ತಿದ್ದಂತೆ ಅವರನ್ನು 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು.