Ashwaveega News 24×7 ಫೆಬ್ರವರಿ 07 -2026 ಮೈಸೂರು : ಜೈಲಿನಲ್ಲಿ ಇರುವ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಸಂಕಷ್ಟದಿಂದ ಪಾರು ಮಾಡುವಂತೆ ಮೈಸೂರಿನ ತಾಯಿ ಚಾಮುಂಡೇಶ್ವರಿಯನ್ನು ಭವಾನಿ ರೇವಣ್ಣ ಮೊರೆಹೋದ ಘಟನೆ ಮಂಗಳವಾರ ನಡೆದಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭವಾನಿ ರೇವಣ್ಣ ಅವರು ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ‘ಪ್ರಜ್ವಲ್ ರೇವಣ್ಣರನ್ನು ಸಂಕಷ್ಟದಿಂದ ಬಿಡುಗಡೆಗೊಳಿಸಬೇಕು’ ಎಂದು ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನೂ ಎಳೆದರು.
ಈ ವೇಳೆ ಮೈಸೂರಿನ ಸ್ಥಳೀಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭವಾನಿ ರೇವಣ್ಣ ಅವರಿಗೆ ಸಾಥ್ ನೀಡಿದರು. ಪೂಜೆ ಕಾರ್ಯಕ್ರಮದ ವೇಳೆ ಭದ್ರತೆ ಹೆಚ್ಚಿಸಲಾಗಿತ್ತು.
ಪ್ರಜ್ವಲ್ ರೇವಣ್ಣ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿ ಇರುವುದಾಗಿ ತಿಳಿದುಬಂದಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಅದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಪ್ರಜ್ವಲ್ ವಿರುದ್ಧದ ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದ್ದು, ಈ ನಡುವೆ ಕುಟುಂಬದವರು ದೇವರ ಮೊರೆ ಹೋಗಿರುವುದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
