
bjp-mlc-n ravi kumar remarks against chief secretary shalini rajneesh gow
(ಅಶ್ವವೇಗ) Ashwaveega News 24×7 ಜು.03: ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹೌದು.. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಲ್ಲದೆ ಎನ್ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮೂಲಗಳ ಪ್ರಕಾರ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಹೇಳಲಾಗಿದೆ.
ಅಂದು ರವಿಕುಮಾರ್ ಅವರು, ‘ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು’ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಇದೇ ವಿಚಾರವಾಗಿ ಇದೀಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.