
SIDDARAMAIAH ON CM SEAT
(ಅಶ್ವವೇಗ) Ashwaveega News 24×7 ಜು.10: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು.
ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸರಣಿ ಮಾತುಕತೆ ನಡೆಸುವುದರ ಉದ್ದೇಶವೇನು ಎಂಬ ಪ್ರಶ್ನೆಗೆ, “ಇದನ್ನು ಅವರಿಗೇ (ಸುರ್ಜೇವಾಲಾ) ಕೇಳಿ. ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸುರ್ಜೇವಾಲಾ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲಿ ಯಾವುದೇ ಊಹಾಪೋಹಗಳು ಬೇಕಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚಿಸಲಾಗುತ್ತಿದೆ. ಪಕ್ಷದ ಮಟ್ಟದಲ್ಲಿ ಇಂತಹ ಯಾವುದೇ ಚರ್ಚೆ ನಡೆದಿಲ್ಲ” ಎಂದರು.
“ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಾಕಾಶ ಕೇಳಿದ್ದೇನೆ. ಇಲ್ಲಿಯವರೆಗೆ ಯಾವುದೇ ಮಾಹಿತಿ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿಕೆ ಶಿವಕುಮಾರ್ ಹೇಳಿದ್ದೇನು?: 5 ವರ್ಷಗಳ ಸಿಎಂ ಅವಧಿಯ ಮಧ್ಯಭಾಗದಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಈಗಿನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಾರಥ್ಯ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಪದೇ ಪದೆ ಕೇಳಿಬರುತ್ತಿತ್ತು.
ಸ್ವತಃ ಡಿಕೆ ಶಿವಕುಮಾರ್ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದು, “ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಹೇಳಿದ್ದಾರೆ. ಹೀಗಾಗಿ, ನಾನು ಅವರಿಗೆ ಬೆಂಬಲ ನೀಡಲೇಬೇಕು” ಎಂದಿದ್ದರು.