Ashwaveega News 24×7 ಏಪ್ರಿಲ್ 13 – 2026 : ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಘಟಕದಲ್ಲಿ ರಾಜೀನಾಮೆಗಳ ಸರಣಿ ಮುಂದುವರಿದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನಾಯಕರು ಅಸಮಾಧಾನ ವ್ಯಕ್ತಪಡಿಸಿ ಸಮೂಹ ರಾಜೀನಾಮೆಗೆ ಮುಂದಾಗಿದ್ದಾರೆ.
ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ವಿವಿಧ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಕಳುಹಿಸಲು ತೀರ್ಮಾನಿಸಲಾಗಿದೆ.
ಅಲ್ಪಸಂಖ್ಯಾತ ಘಟಕದ ಮುಖಂಡ ಮೊಹಮ್ಮದ್ ಸಿರಾಜ್ ಆಕ್ರೋಶ ವ್ಯಕ್ತಪಡಿಸಿ, “ಅಬ್ದುಲ್ ಜಬ್ಬಾರ್ ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.
ಸಿರಾಜ್ ಅವರು ಹೇಳುವಂತೆ, “ಜಬ್ಬಾರ್ ಅವರ ಸೂಚನೆಯಂತೆ ನಾವು ಎಲ್ಲರೂ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಉಪಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸಿದ್ದೇವೆ. ಆದರೆ ಉಪಚುನಾವಣೆ ಬಳಿಕ ನಡೆದ ಬೆಳವಣಿಗೆಗಳಿಂದ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ,” ಎಂದರು.
ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರೂ ಸಹ ಹುದ್ದೆ ತ್ಯಜಿಸಲು ಮುಂದಾಗಿದ್ದಾರೆ.
ಇದಲ್ಲದೆ, “ನಾವು ಹುದ್ದೆಗಳಿಂದ ರಾಜೀನಾಮೆ ನೀಡುತ್ತಿದ್ದೇವೆ ಹೊರತು, ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಸಾಮಾನ್ಯ ಕಾರ್ಯಕರ್ತರಾಗಿ ಮುಂದುವರೆಯುತ್ತೇವೆ,” ಎಂದು ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ನಾಯಕರು ಒತ್ತಾಯಿಸಿದ್ದಾರೆ. ಅಲ್ಪಸಂಖ್ಯಾತರು ಮತ್ತು ‘ಅಹಿಂದ’ ಪರ ನಿಂತಿದ್ದಕ್ಕಾಗಿ ಕೆಲವರು ಜಬ್ಬಾರ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
