ಬೆಂಗಳೂರು : ವಕ್ಫ್ ಬಳಿಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಸರ್ಕಾರಿ ಸಿವಿಲ್ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದಿರುವ ಯತ್ನಾಳ್ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನು ಸರ್ಕಾರ ತಳ್ಳಿ ಹಾಕಿದ್ದು, ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ,ಬೇಡಿಕೆ ಮಾತ್ರ ಬಂದಿದೆ ಎಂದು ಸ್ಪಷ್ಟನೆ ನೀಡಿದೆ. ಸರ್ಕಾರಿ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಬೇಡಿಕೆ ಬಂದಿದ್ದು,ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಒಂದು ಕೋಟಿ ರೂ.ವರೆಗಿನ ಕಾಮಗಾರಿ ಟೆಂಡರ್ʼಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಸಲ್ಲಿಸಿದ್ದು, ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಲವರು ಪತ್ರ ಬರೆದಿದ್ದಾರೆ. ಇದಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್ ಸಹ ಸಹಿ ಮಾಡಿದ್ದರು. ಅದರಂತೆ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಂಡಿಸಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಸರ್ಕಾರಿ ಕಾಮಗಾರಿ ಗುತ್ತಿಗೆಗಳಲ್ಲಿ ಎಸ್ ಸಿ ಎಸ್ಟಿ ಸಮುದಾಯಕ್ಕೆ ಶೇ 24ರ,ಒಬಿಸಿ ಸಮುದಾಯಕ್ಕೆ ಶೇ 4,2A ಅಡಿ ಗುತ್ತಿಗೆಯಲ್ಲಿ ಶೇ 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ 43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಶೇ 4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ ಇದೆಲ್ಲವೂ ಸುಳ್ಳು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.