
ಬೆಂಗಳೂರು : ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು, ಮೌಖಿಕವಾಗಿ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.