Ashwaveega News 24×7 ಮಾರ್ಚ್ 02– 2026 : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯರಲ್ಲಿ ಆತಂಕ ಹೆಚ್ಚಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ಅಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ಚರ್ಚೆಗಳು ಜೋರಾಗಿವೆ .
ಮಾಹಿತಿಯ ಪ್ರಕಾರ, ಇರಾನ್ನಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದಾರೆ. ಇಸ್ರೇಲ್ನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಭಾರತೀಯರು ನೆಲೆಸಿದ್ದಾರೆ ಎಂದು ಅಂದಾಜಿಸಲಾಗಿದೆ. ಸಂಘರ್ಷದ ಹಿನ್ನಲೆಯಲ್ಲಿ ಅವರ ಸುರಕ್ಷತೆ ಬಗ್ಗೆ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿದೆ .
ಇದಕ್ಕೂ ಹೊರತಾಗಿ ಗಲ್ಫ್ ಪ್ರದೇಶದ ಯುನೈಟೆಡ್ ಅರಬ್ ಎಮಿರೇಟ್ಸ್ , ಕತಾರ್, ಕುವೈತ್, ಬಹ್ರೇನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ದೇಶಗಳಲ್ಲಿ ಲಕ್ಷಾಂತರ ಭಾರತೀಯರು ಉದ್ಯೋಗದಲ್ಲಿದ್ದಾರೆ . ಯುದ್ಧದ ಭೀತಿ ಹೆಚ್ಚಾದರೆ ಅವರ ಜೀವನೋಪಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಭಾರತೀಯರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಕೇಳಿಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರೆಂದು ವರದಿಯಾಗಿದೆ. ಶಾಂತಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮೋದಿ ಸೂಚಿಸಿದ್ದಾರೆಯೆಂಬ ಮಾಹಿತಿ ಲಭ್ಯವಾಗಿದೆ.
ಭಾರತೀಯ ವಿದೇಶಾಂಗ ಸಚಿವಾಲಯ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದರೆ ಸ್ಥಳಾಂತರ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಂಡಿದೆ ..
ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮ ಜಾಗತಿಕ ಮಟ್ಟದಲ್ಲಿ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ, ಗಲ್ಫ್ ದೇಶಗಳಲ್ಲಿ ಇರುವ ಭಾರತೀಯರ ಸುರಕ್ಷತೆ ಇದೀಗ ಪ್ರಮುಖ ಚರ್ಚೆಯ ವಿಷಯವಾಗಿದೆ .
