
Karnataka High Court Stays Govt Order Closing 'Jan Aushadhi
(ಅಶ್ವವೇಗ) Ashwaveega News 24×7 ಜು.08: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court)ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು.
ಇದಕ್ಕೆ ಭಾರೀ ವೀರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು (ಜುಲೈ 08) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ,ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.