Ashwaveega News 24×7 ಏಪ್ರಿಲ್ 25 – 2026 : ತುಮಕೂರು : ಪಂಚರಾಜ್ಯಗಳ ಚುನಾವಣೆಯ ನಂತರ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷ ಒಳಗಡೆಯೇ ದೊಡ್ಡ ಮಟ್ಟದ ಭಿನ್ನಾಭಿಪ್ರಾಯ ಎದುರಿಸುತ್ತಿದೆ ಎಂದು ಅವರು ಆರೋಪಿಸಿದರು.
ಒಂದೆಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಲವು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದ ಜೊತೆ ಸಭೆ ನಡೆಸುತ್ತಿರುವುದು ಪಕ್ಷದ ಒಳಗಿನ ಕಚ್ಚಾಟವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಕಾಂಗ್ರೆಸ್ನಲ್ಲಿ ನಾಯಕತ್ವದ ಪೈಪೋಟಿ ಹೆಚ್ಚಾಗಿದ್ದು, ಸಿಎಂ ಸ್ಥಾನಕ್ಕಾಗಿ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಎಂ.ಬಿ. ಪಾಟೀಲ್ ಹೆಸರುಗಳು ಕೇಳಿಬರುತ್ತಿವೆ ಎಂದು ಅವರು ಹೇಳಿದರು.
ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಈಗಾಗಲೇ ಸಿಎಂ ಆಗಿರುವಂತೆಯೇ ವರ್ತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒಳರಾಜಕೀಯ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಹೇಳಿದರು.
