Ashwaveega News 24×7 ಫೆಬ್ರವರಿ 24 – 2026 ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಉಂಟಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ . ಔಷಧಿ ಲಭ್ಯವಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರಿ ವೈದ್ಯರು ಅಳಲು ತೋಡಿಕೊಂಡಿದ್ದಾರೆ.
“ರೋಗಿಗಳು ಆಸ್ಪತ್ರೆಗೆ ಬಂದಾಗ ಔಷಧಿ ಕೊಡದಿದ್ದರೆ ನಮ್ಮ ಮೇಲೆಯೇ ಕೋಪ ತೋರುತ್ತಾರೆ. ಕೆಲವೊಮ್ಮೆ ಹಲ್ಲೆ ಮಾಡುವ ಪರಿಸ್ಥಿತಿ ಉಂಟಾಗುತ್ತದೆ,” ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಔಷಧಿ ಪೂರೈಕೆ ಇಲ್ಲದೆ ವೈದ್ಯರು ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. “ಕೇಳಿದ್ರೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಅಂತಾರೆ. ಆದರೆ ರೋಗಿಗಳಿಗೆ ಚಿಕಿತ್ಸೆ ಕೊಡಲು ಔಷಧಿ ಬೇಕು, ಕಾರಣಗಳು ಬೇಡ,” ಎಂಬ ಅಸಮಾಧಾನ ವ್ಯಕ್ತವಾಗಿದೆ.
ಇದೇ ವೇಳೆ ಬೇಸಿಗೆ ಆರಂಭವಾಗಿರುವುದರಿಂದ ವಾಂತಿ-ಬೇಧಿ ಸೇರಿದಂತೆ ಜಲಜಾತ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಆದರೆ ಅಗತ್ಯ ಔಷಧಿಗಳ ಕೊರತೆ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
“ಬೇಗ ಔಷಧಿಗಳನ್ನು ಆಸ್ಪತ್ರೆಗೆ ಪೂರೈಸಿ. ರೋಗಿಗಳ ಜೀವದೊಂದಿಗೆ ಆಟವಾಡಬೇಡಿ,” ಎಂದು ಸರ್ಕಾರಿ ವೈದ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರದ ಬೊಕ್ಕಸದಲ್ಲಿ ಹಣದ ಕೊರತೆ ಇದೆಯೇ ? ಅಥವಾ ಆಡಳಿತಾತ್ಮಕ ವಿಳಂಬವೇ ಕಾರಣವೇ ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ …
