Ashwaveega News 24×7 ನವೆಂಬರ್. 29: ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಹೌದು. . ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು (ನ.29) ಉಪಾಹಾರ ಸಭೆ ನಡೆಸಿದ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನಮ್ಮಲ್ಲಿ ಯಾವುದೇ ಗುಂಪು ಇಲ್ಲ.
ಕೃಷ್ಣ ಅವರ ಕಾಲದಲ್ಲೂ ಗುಂಪುಗಾರಿಕೆ ಮಾಡಿಲ್ಲ. ಇವತ್ತಿಗೂ ಅವಕಾಶ ಕೊಟ್ಟಿಲ್ಲ. ನನಗೆ ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೊದಲ ಆರು ತಿಂಗಳು ನನ್ನನ್ನು ಮಂತ್ರಿ ಮಾಡದೇ ಇದ್ದಾಗಲೂ ನಾನು ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಒಟ್ಟಾಗಿ ಕೆಲಸ ಮಾಡುವ ನನ್ನ ನಿರ್ಧಾರ ಅಚಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೆಲಸ ಮಾಡಿಕೊಂಡು ಹೋಗುತ್ತೇವೆ.
ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು, ಪ್ರತಿಯೊಬ್ಬ ಶಾಸಕರಿಗೆ ಶಕ್ತಿ ತುಂಬಿ, ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದು ನಮ್ಮಿಬ್ಬರ ಕರ್ತವ್ಯ. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಅನೇಕ ಕಾರ್ಯಕ್ರಮ ರೂಪಿಸಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ನೀಡಿರುವ ಸಂದೇಶಕ್ಕೆ ನನ್ನ ಸಹಮತವಿದೆ ಎಂದರು.
