Ashwaveega News 24×7 ಮಾರ್ಚ್ 17 – 2026 : ಮಾರ್ಚ್ ತಿಂಗಳು ಆರಂಭವಾದಂತೆಯೇ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಒತ್ತಡ ಗರಿಷ್ಠ ಮಟ್ಟ ತಲುಪುತ್ತದೆ. ಇದೇ ಸಮಯದಲ್ಲಿ ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆ, ರಾಜಧಾನಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಸಮಸ್ಯೆ ತಲೆದೋರಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಪ್ರತಿದಿನ 1ರಿಂದ 2 ಗಂಟೆಗಳವರೆಗೆ ಪವರ್ ಕಟ್ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿಶೇಷವಾಗಿ ಸಂಜೆ ಹಾಗೂ ರಾತ್ರಿ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಅವಧಿಯಲ್ಲೇ ಈ ರೀತಿಯ ಸಮಸ್ಯೆ ಉಂಟಾಗಿರುವುದು ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಓದುವ ಪ್ರಮುಖ ಸಮಯದಲ್ಲೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಅಧ್ಯಯನದ ಮೇಲೆ ದುಷ್ಪರಿಣಾಮ ಬೀರುತ್ತಿದೆ .
ಹಿನ್ನೆಲೆದಲ್ಲಿ, ವಿದ್ಯುತ್ ಸರಬರಾಜು ಸಂಸ್ಥೆಯಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಎಚ್ಚೆತ್ತುಕೊಂಡಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಪರೀಕ್ಷಾ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಅನಗತ್ಯವಾಗಿ ಪವರ್ ಕಟ್ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ವಿಶೇಷವಾಗಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ನಿರಂತರವಾಗಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ .

ರಾಜ್ಯದಲ್ಲಿ ಬೇಸಿಗೆ ಪ್ರಾರಂಭವಾದಂತೆ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವುದರಿಂದ ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದ ಸಮಸ್ಯೆಗಳು ಉಂಟಾಗುತ್ತಿವೆ . ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಅವಧಿಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಾರ್ಚ್ 17 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ SSLC ಪರೀಕ್ಷೆಗಳು ಸಂದರ್ಭದಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲು ಬೆಸ್ಕಾಂ ಮುಂದಾಗಿದೆ.
ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡಚಣೆ ಆಗದಂತೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಕ್ರಮದಿಂದ ವಿದ್ಯಾರ್ಥಿಗಳಿಗೆ ಸ್ವಲ್ಪ ಮಟ್ಟಿನ ನಿರಾಳತೆ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ .
