Ashwaveega News 24×7 ಮಾರ್ಚ್ 20 – 2026 : ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ನೀಡಿದ ಚಾಟಿ ಬೆನ್ನಲ್ಲೇ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಅಶೋಕ್, “ಒಂದು ಕಡೆ ಖಜಾನೆ ಸಂಪೂರ್ಣವಾಗಿ ದಿವಾಳಿ ಆಗಿದೆ, ಇನ್ನೊಂದು ಕಡೆ ಮುಖ್ಯಮಂತ್ರಿ ಕುರ್ಚಿ ಸದಾ ಅಲುಗಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
“ಸರ್ಕಾರಿ ನೌಕರರ ವರ್ಗಾವಣೆ ದಂಧೆಯನ್ನೇ ಮುಖ್ಯ ಕಾಯಕ ಮಾಡಿಕೊಂಡಿರುವ ಸರ್ಕಾರದ ವಿರುದ್ಧ ಮಾನ್ಯ ಹೈಕೋರ್ಟ್ ಚಾಟಿ ಬೀಸಿದೆ. ಸಿಎಂಗೆ ವರ್ಗಾವಣೆಗಿಂತ ಮಾಡುವ ಉತ್ತಮ ಕೆಲಸಗಳು ಇವೆ ಎಂಬುದನ್ನು ನ್ಯಾಯಾಲಯವೇ ಸೂಚಿಸಿದೆ,” ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ದುರಾಡಳಿತ ಹಾಗೂ ವರ್ಗಾವಣೆ ದಂಧೆ ತಾಂಡವ ಮಾಡುತ್ತಿದೆ ಎಂದು ಆರೋಪಿಸಿದ ಅಶೋಕ್, “ಇದು ಸರ್ಕಾರದ ವೈಫಲ್ಯಕ್ಕೆ ಕನ್ನಡಿ. ಈ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ ಇದ್ದರೆ ತಕ್ಷಣ ವಿಧಾನಸಭೆ ವಿಸರ್ಜನೆ ಮಾಡಿ ಜನರ ಕ್ಷಮೆ ಕೇಳಬೇಕು,” ಎಂದು ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ, ಹೈಕೋರ್ಟ್ ಟೀಕೆ ಬೆನ್ನಲ್ಲೇ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
