
Ashwaveega News 24×7 ಸೆ. 13: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ವೈಫಲ್ಯದಿಂದ ಅವಘಡ ಸಂಭವಿಸಿದೆ ಎಂದು ರೇವಣ್ಣ ಕಿಡಿಕಾರಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹ ದುರಂತ ನಡೆದ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಘಟನೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.