
Three dead, 12 injured as speeding truck rams tempo traveler
ಅತಿವೇಗದಿಂದ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದು, ಇತರ ಹನ್ನೆರಡು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿ ಸೋಮವಾರ ಮುಂಜಾನೆ ನಡೆದಿದೆ.
ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಮರ್ರಿ ಬಳಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್ (17), ಚರಣ್ (17), ಮತ್ತು ಶ್ರಾವಣಿ (28) ಮೃತಪಟ್ಟಿದ್ದಾರೆ.
ಮದನಪಲ್ಲಿಯಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಹನ್ನೆರಡು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಕ್ಕಿ ಹೊಡೆದ ಲಾರಿ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಐ ಸತ್ಯನಾರಾಯಣ ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರು ಭೀಕರ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದ ಅವರು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.